ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ
ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣ ಹವಾಮಾನ ಇಲಾಖೆ ಸೋಮವಾರ ಕರಾವಳಿ ಜಿಲ್ಲೆಗಳಿಗೆ ಇಂದು ಭಾರಿ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಸೋಮವಾರದಂದು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಇರುತ್ತದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವು ತುರ್ತು ಕ್ರಮಗಳನ್ನು ಕೈಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಲಾಗಿದೆ.
























