ಸ್ವಾಮೀಜಿಗಳ ನಿಯೋಗಕ್ಕೆ ಅಮಿತ್ ಶಾ ನೀಡಿದರು ಭರವಸೆ
ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದ ಎಲ್ಲ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಸ್ವಾಮೀಜಿಗಳ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಧರ್ಮಸ್ಥಳದ ಮೇಲಿನ ಅಪಪ್ರಚಾರ ಸಂಬಂಧಿತ ಎಲ್ಲ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸಬೇಕೆಂದು ಆಗ್ರಹಿಸಿ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಅಮಿತ್ ಶಾ ಜೊತೆ ಸ್ವಾಮೀಜಿಗಳು ಧರ್ಮಸ್ಥಳ ಪ್ರಕರಣ ಕುರಿತು ಸುದೀರ್ಘ ಚರ್ಚೆ ನಡೆಸಿ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಕುರಿತು ಮಾಹಿತಿ ನೀಡಿದರು.
ಧರ್ಮಸ್ಥಳ ಪ್ರಕರಣದ ಬಗ್ಗೆ ಸಚಿವ ಸಂಪುಟ ಸಭೆ ನಡೆಸಲಿದೆ. ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ. ನೀವು ಸಮಾಜವನ್ನ ಜಾಗೃತಿಗೊಳಿಸಿ ಎಂದು ಸ್ವಾಮೀಜಿಗಳಿಗೆ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಸ್ವಾಮೀಜಿಗಳಿಂದ ಸುಮಾರು ಒಂದು ಗಂಟೆಗಳ ಕಾಲ ಮಾಹಿತಿ ಪಡೆದ ನಂತರ ಅಮಿತ್ ಶಾ ಈ ಪ್ರತಿಕ್ರಿಯೆ ನೀಡಿದರು.
ಧರ್ಮಸ್ಥಳ ಪ್ರಕರಣದಲ್ಲಿ ಯೂಟ್ಯೂಬರ್ಗಳಿಗೆ ವಿದೇಶಗಳಿಂದ ಹಣಕಾಸು ನೆರವು ಹರಿದು ಬಂದಿದೆ ಎಂಬ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ಈಗಾಗಲೇ ಪ್ರಾಥಮಿಕ ತನಿಖೆ ಆರಂಭಿಸಿದೆ. ಇದೀಗ ಎನ್ಐಎ ತನಿಖೆ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಯೂಟ್ಯೂಬರ್ ಅಭಿಷೇಕ್ ವಿಚಾರಣೆ
ಮತ್ತೊಂದು ಬೆಳವಣಿಗೆಯಲ್ಲಿ ಎಸ್ಐಟಿ ಅಧಿಕಾರಿಗಳು ಯೂಟ್ಯೂಬರ್ ಅಭಿಷೇಕ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಬುಧವಾರ ತಡರಾತ್ರಿವರೆಗೂ ಅಭಿಷೇಕ್ನ ವಿಚಾರಣೆ ನಡೆಸಲಾಗಿದೆ. ಪ್ರಕರಣದ ಕುರಿತು ಯೂಟ್ಯೂಬ್ ವಿಡಿಯೋಗಳಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪ ಆತನ ಮೇಲಿದೆ. ಪ್ರಕರಣದ ದಾಖಲಾಗುವ ಮೊದಲೇ ವಿಡಿಯೋಗಳನ್ನು ಮಾಡಿದ್ದ ಅಭಿಷೇಕ್ ಅದಕ್ಕೂ ಮುನ್ನ 6 ತಿಂಗಳ ಹಿಂದೆ ಗಿರೀಶ್ ಮಟ್ಟಣ್ಣವರ್ ಸಂಪರ್ಕಿಸಿದ್ದ ಎಂಬ ಮಾಹಿತಿ ಬಹಿರಂಗಗೊಂಡಿದೆ.
ಲೈಕ್ಸ್ ಹಾಗೂ ವ್ಯೂಗಾಗಿ ವಿಡಿಯೋ ಮಾಡಿದ್ದೆ ಎಂದು ಎಸ್ಐಟಿ ವಿಚಾರಣೆ ವೇಳೆ ಯೂಟ್ಯೂಬರ್ ತಪ್ಪೊಪ್ಪಿಕೊಂಡಿದ್ದಾನೆ. ಅಲ್ಲದೆ ಎಸ್ಐಟಿ ಅಧಿಕಾರಿಗಳ ಮುಂದೆ ಕಣ್ಣಿರು ಹಾಕಿದ್ದಾನೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಯೂಟ್ಯೂಬರ್ಗಳಿಗೆ ಎಸ್ಐಟಿ ನೋಟಿಸ್ ನೀಡಲಿದೆ.
ಶುಕ್ರವಾರ ಧರ್ಮ ಜಾಗೃತಿ ಸಮಾವೇಶ
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಶುಕ್ರವಾರ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಧರ್ಮ ಸಂರಕ್ಷಣಾ ಸಮಿತಿಯಿಂದ ಸಮಾವೇಶ ಆಯೋಜನೆ ಮಾಡಲಾಗುತ್ತಿದ್ದು ದೇವಸ್ಥಾನ, ದೈವಸ್ಥಾನ, ಬಸದಿಗಳ ಪ್ರಮುಖರು ಭಾಗಿಯಾಗಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯನ್ನು ಕೇಂದ್ರೀಕರಿಸಿ ಸಮಾವೇಶ ನಡೆಸಲಾಗುತ್ತಿದೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸಭೆ ನಡೆಯಲಿದೆ.
























