ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಲು ಆಗ್ರಹ
ಬೆಂಗಳೂರು : ಸರ್ಕಾರಿ ಶಾಲೆಯ ಆವರಣ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬಿಜೆಪಿ ಮತ್ತು ಸಂಘ ಪರಿವಾರದ ಆಕ್ರೋಶಕ್ಕೆ ಗುರಿಯಾಗಿರುವ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಮುಖ್ಯಮಂತ್ರಿಗಳಿಗೆ ಮತ್ತೊಂದು ಪತ್ರ ಬರೆದು ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವುದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ಸರ್ಕಾರಿ ನೌಕರರಿಗೆ ಹಲವು ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಆಗಲಿದೆ ಎಂಬ ಸುತ್ತೋಲೆ ಹೊರಡಿಸಬೇಕು. ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಸಿಎಂಗೆ ಬರೆದ ಪತ್ರದಲ್ಲಿ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.
ಸರ್ಕಾರಿ ನೌಕರ ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವ ಸಂಘ ಸಂಸ್ಥೆಯ ಸದಸ್ಯನಾಗಿರಬಾರದು. ಅವುಗಳೊಂದಿಗೆ ಸಂಬಂಧ ಹೊಂದಿರಬಾರದು ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಆರ್‌ಎಸ್‌ಎಸ್ ಹಾಗೂ ಇತರ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ. ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ಆರ್‌ಎಸ್‌ಎಸ್, ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಶಿಸ್ತುಕ್ರಮ ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಕ್ರಮ ಕೈಗೊಳ್ಳಬೇಕೆಂದು ನೌಕರರಿಗೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಸಿಎಂಗೆ ಬರೆದ ಪತ್ರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಸರ್ಕಾರಿ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಆರ್‌ಎಸ್‌ಎಸ್, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆ ನಂತರ, ತಮಗೆ ಬೆದರಿಕೆ ಕರೆಗಳು ಹಾಗೂ ಸಂದೇಶಗಳು ಬರುತ್ತಿವೆ. ಆದರೆ, ಯಾವುದಕ್ಕೂ ಜಗ್ಗಲ್ಲ ಎಂದು ಅವರು ಹೇಳಿದ್ದರು. ಇದೀಗ ಮತ್ತೆ ಸಿಎಂಗೆ ಪತ್ರ ಬರೆದಿದ್ದಾರೆ.
























