ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ನಲ್ಲಿ ಬೆಂಕಿ ಹತ್ತಿಕೊಂಡು 20 ಮಂದಿ ದಹನವಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಬಸ್ಸಿನಲ್ಲಿ 42 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಖಾಸಗಿ ಬಸ್ಗೆ ಬೆಂಕಿ ಹತ್ತಿದ್ದು ಇದರಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬಸ್ ಬೆಂಗಳೂರಿನಿಂದ ಹೈದರಾಬಾದ್ಗೆ ಹೋಗುತ್ತಿತ್ತು. ಬೆಳಗ್ಗಿನ ಜಾವ 3.30 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಬಸ್ಸಿಗೆ ದ್ವಿಚಕ್ರ ವಾಹನವೊಂದು ಢಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ.
ಈ ಅಪಘಾತದ ಪರಿಣಾಮ ಬೈಕ್ ಬಸ್ಸಿನಡಿ ಸಿಲುಕಿದ್ದು, ತಕ್ಷಣವೇ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ. ತುರ್ತು ನಿರ್ಗಮನ ಮತ್ತು ಕಿಟಕಿ ಗಾಜುಗಳನ್ನು ಒಡೆದು 12 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದರೆ, ಬೆಂಕಿಯು ವಾಹನವನ್ನು ಸುಟ್ಟುಹಾಕಿದ್ದರಿಂದ ಹಲವರು ಒಳಗೆ ಸಿಲುಕಿಕೊಂಡರು.
ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆದಾಗ್ಯೂ, ಪ್ರದೇಶದಲ್ಲಿ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ತೀವ್ರ ಅಡ್ಡಿಯಾಯಿತು. ಅಪಘಾತದ ನಂತರ ಬಸ್ ಚಾಲಕ ಸೇರಿದಂತೆ ಬಸ್ ಸಿಬ್ಬಂದಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
























