ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿಲ್ಲ ಎಂದು ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳಲು ಮುಂದಾದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಮಾರ್ಗದ ಮಧ್ಯೆಯೇ ತಡೆದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ವಶಕ್ಕೆ ಪಡೆಯುವುದಕ್ಕೆ ಮುನ್ನ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ. ಇಲ್ಲಿಯವರೆಗೆ ಸುಮ್ಮನಿದ್ದ ಅವರು ನಾವು ಪ್ರತಿಭಟನೆಗೆ ಮುಂದಾದ ಬಳಿಕ ಇವತ್ತು ಕಳುಹಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು
ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿ(ಎಸ್ಸಿ)ಗೆ ಶೇ.15ರಿಂದ ಶೇ.17 ಹಾಗೂ ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಶೇ.3ರಿಂದ ಶೇ.7ಕ್ಕೆ ಹೆಚ್ಚಳ ಮಾಡಿ ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದಿತ್ತು. ಆದರೆ, ಈ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕಾನೂನು ಬಲ ನೀಡಲು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರ್ಪಡೆ ಮಾಡಬೇಕಾಗಿತ್ತು. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿತ್ತು.