ಗೋವಾದ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ : 23 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ಗ್ಯಾಸ್‌ ಸಿಲಿಂಡರ್‌ ಸ್ಫೋಟಿಸಿ ಸಂಭವಿಸಿದ ಭೀಕರ ದುರಂತ

ಪಣಜಿ : ಉತ್ತರ ಗೋವಾದ ಅರ್‌ಪೋರಾದಲ್ಲಿರುವ ನೈಟ್​​ ಕ್ಲಬ್‌ನಲ್ಲಿ ಶನಿವಾರ ಮಧ್ಯರಾತ್ರಿ ನಡೆದ ಭೀಕರ ಅಗ್ನಿ ದುರಂತದಲ್ಲಿ 23 ಜನ ದುರ್ಮರಣ ಹೊಂದಿದ್ದಾರೆ. ಮಧ್ಯರಾತ್ರಿ ಅಡುಗೆ ಮನೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ನೈಟ್​​ ಕ್ಲಬ್ ಹೊತ್ತಿ ಉರಿದಿದೆ. ಈ ವೇಳೆ ಹಲವರು ಸಜೀವ ದಹನವಾಗಿದ್ದರೆ, ಉಳಿದವರಿಗೆ ಗಂಭೀರ ಗಾಯಗಳಾಗಿವೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದವರಾಗಿದ್ದು, ಆ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಕೂಡ ಇರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನೈಟ್‌ಕ್ಲಬ್​​ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದೇ ಭಾರಿ ಅವಘಡಕ್ಕೆ ಕಾರಣವಾಗಿದೆ.





















































 
 

ಗೋವಾದ ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ. ದೂರದಲ್ಲಿರುವ ಅರ್‌ಪೋರಾ ಗ್ರಾಮದಲ್ಲಿ ಈ ಬಿರ್ಚ್‌ ಬೈ ರೋಮಿಯೊ ಲೇನ್‌ ಕ್ಲಬ್‌ ಎಂಬ ಜನಪ್ರಿಯ ನೈಟ್​​ಕ್ಲಬ್​​​ ಕಳೆದ ವರ್ಷ ಆರಂಭವಾಗಿತ್ತು. ಎಲ್ಲ 23 ಶವಗಳನ್ನು ಘಟನಾ ಸ್ಥಳದಿಂದ ಹೊರತೆಗೆಯಲಾಗಿದ್ದು, ಬಾಂಬೊಲಿಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿದ್ದು, ಇಡೀ ರಾತ್ರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಅಗ್ನಿ ದುರಂತದ ವಿಚಾರ ತಿಳಿದು ತುಂಬಾ ನೋವಾಗಿದೆ ಎಂದು ಹೇಳಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನೈಟ್​​ಕ್ಲಬ್ ಅಗ್ನಿ ದುರಂತದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದು, ಶೀಘ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ದುರಂತದಲ್ಲಿ ಮಡಿದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಗ್ನಿ ದುರಂತ ಮನ ಕಲಕಿದೆ, ಮಡಿದವರ ಪರಿವಾರಗಳಿಗೆ ಸಂತಾಪ ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲೆಂದು ಹಾರೈಸುತ್ತೇನೆ ಎಂಬುದಾಗಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

error: Content is protected !!
Scroll to Top