ಹೈದರಾಬಾದ್: ಇಲ್ಲಿನ ಕುಷಯಗುಡ ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶನಿವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಮಕ್ಕಳಿಗೆ ವಿಷ ಕುಡಿಸಿ ಬಳಿಕ ಹೆತ್ತವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ.
ಇಬ್ಬರೂ ಮಕ್ಕಳು ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು. ಮಾನಸಿಕವಾಗಿ ಅಸ್ವಸ್ಥರಾಗಿದ್ದರು. ಅವರಿಗೆ ಚಿಕಿತ್ಸೆ ನೀಡಲಾಗಿದ್ದರೂ, ಮಕ್ಕಳು ಚೇತರಿಸಿಕೊಳ್ಳುತ್ತಿಲ್ಲ ಎಂದು ಪೋಷಕರು ಖಿನ್ನತೆಗೆ ಜಾರಿದ್ದರು. ಆತ್ಮಹತ್ಯೆಗೆ ಇದೇ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ತಿಳಿಸಿದ್ದಾರೆ.