ಗಣರಾಜ್ಯೋತ್ಸವ ಸಂದರ್ಭದಲ್ಲಿ ಭಾರಿ ಕಾರ್ಯಾಚರಣೆ ನಡೆಸಿದ ಪೊಲೀಸರು
ಜೈಪುರ: ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಕ್ಷಣಗಣನೆ ಶುರುವಾಗಿರುವಂತೆಯೇ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಸುಮಾರು 10,000 ಕೆಜಿ ಸ್ಫೋಟಕ ಮತ್ತು ಡಿಟೋನೇಟರ್‌ಗಳು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ರಮ ಗಣಿಗಾರಿಕೆ ಸಂಬಂಧಿತ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದ ರಾಜಸ್ಥಾನದ ನಾಗೌರ್ ಜಿಲ್ಲೆಯ ಪೊಲೀಸರು ತೋಟದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ 10 ಸಾವಿರ ಕೆಜಿ ಸ್ಫೋಟಕಗಳು ಹಾಗೂ ಡಿಟೋನೇಟರ್‌ಗಳನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ. ಹರ್ಸೌರ್ ಗ್ರಾಮದ ನಿವಾಸಿ ಸುಲೇಮಾನ್ ಖಾನ್ ಬಂಧಿತ ಆರೋಪಿ.
ಖಚಿತ ಮಾಹಿತಿ ಮೇರೆಗೆ ರಾಜಸ್ಥಾನ ಪೊಲೀಸರು ಹರ್ಸೌರ್‌ನ ತೋಟದ ಮನೆಯೊಂದರ ಮೇಲೆ ದಾಳಿ ಮಾಡಿದಾಗ 187 ಚೀಲಗಳಲ್ಲಿ ತುಂಬಿಟ್ಟಿದ್ದ ಒಟ್ಟು 9,550 ಕೆಜಿ ಅಮೋನಿಯಂ ನೈಟ್ರೇಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಸ್ಫೋಟಕಗಳ ಜೊತೆಗೆ ಭಾರಿ ಪ್ರಮಾಣದ ಸ್ಫೋಟಕ ಪರಿಕರಗಳನ್ನೂ ವಶಪಡಿಸಿಕೊಂಡಿದ್ದಾರೆ. ಇದರಲ್ಲಿ 9 ಪೆಟ್ಟಿಗೆಗಳಲ್ಲಿ ಡಿಟೋನೇಟರ್‌ಗಳು, 12 ಪೆಟ್ಟಿಗೆ ಮತ್ತು 15 ಬಂಡಲ್‌ಗಳಷ್ಟು ನೀಲಿ ಫ್ಯೂಸ್ ವೈರ್, 12 ಪೆಟ್ಟಿಗೆ ಮತ್ತು 5 ಬಂಡಲ್‌ಗಳ ಕೆಂಪು ಫ್ಯೂಸ್ ವೈರ್‌ಗಳನ್ನೂ ವಶಕ್ಕೆ ಪಡೆಯಲಾಗಿದೆ. ನಂತರ ದಾಳಿ ವೇಳೆ ಸ್ಥಳದಲ್ಲಿದ್ದ ಸುಲೇಮಾನ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳಿವೆ. ಈತನ ವಿರುದ್ಧ ಸ್ಫೋಟಕ ಕಾಯ್ದೆ 1884, ಸ್ಫೋಟಕ ವಸ್ತುಗಳ ಕಾಯ್ದೆ 1908 ಮತ್ತು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಾಗೌರ್ ಎಸ್ಪಿ ಮೃದುಲ್ ಕಚ್ಛವಾ ಮಾಹಿತಿ ಹಂಚಿಕೊಂಡಿದ್ದಾರೆ.
























