ಇಂಗ್ಲಿಷ್ ಮೀಡಿಯಂ ಶಾಲೆಗಳ ನಾಮಫಲಕವೂ ಕನ್ನಡದಲ್ಲಿರಬೇಕು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಅಂಗಡಿ, ಕಂಪನಿ, ಕಚೇರಿಗಳು ಹೋಟೆಲ್ ಸೇರಿದಂತೆ ವಾಣಿಜ್ಯ ಸಂಸ್ಥಾಪನೆಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿ ಇರಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಸೂಚಿಸಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‍ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಶರತ್ತು ವಿಧಿಸಬೇಕು. ಈ ಬಗ್ಗೆ ಆಗ್ಗಿಂದಾಗೆ ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದಾರೆ.
ರಾಷ್ಟ್ರ್ರೀಯ ಹೆದ್ದಾರಿಗಳಲ್ಲಿ ವಿವಿಧ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ ಮಾಹಿತಿ ನಮೂದಿಸಲು ರಾಷ್ಟ್ರ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗುವುದು. ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿಯೂ ಒದಗಿಸಲು ಬ್ಯಾಂಕುಗಳ ಸಮಿತಿ ಸಭೆಯಲ್ಲಿ ನಿರ್ದೇಶಿಸಲಾಗುವುದು ಎಂದು ತಿಳಿಸಿದರು.
ಇಂಗ್ಲಿಷ್ ಮೀಡಿಯಂ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸುತ್ತಿದ್ದರೂ, ಶಾಲೆಯ ನಾಮಫಲಕವನ್ನು ಕನ್ನಡದಲ್ಲಿಯೂ ಬರೆಯಬೇಕು. ಖಾಸಗಿ ಬಸ್ಸುಗಳ ಬೋರ್ಡುಗಳಲ್ಲಿ ಕನ್ನಡದಲ್ಲಿ ಊರಿನ ಹೆಸರು ಬರೆಯುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ನಗರದ ಮಾಲ್‍ಗಳಲ್ಲಿರುವ ಅಂಗಡಿಗಳ ನಾಮಫಲಕದಲ್ಲಿ ಹೆಸರನ್ನು ಕನ್ನಡದಲ್ಲಿ ನಮೂದಿಸುವ ಬಗ್ಗೆ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
























