ಪುತ್ತೂರಿನ ಬೈಕ್ ಸವಾರನಿಗೆ ಗಂಭೀರ ಗಾಯ
ವಿಟ್ಲ: ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ವೃದ್ಧ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬೈಕ್ ಸವಾರ ಪುತ್ತೂರು ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಬೈಕ್ ಸುಮಾರು 50 ಮೀಟರ್ ದೂರ ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳೀಯರು ತಮ್ಮ ದ್ವಿಚಕ್ರ ವಾಹನದಲ್ಲಿ ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
























