ಕಾರು, ಕ್ಯಾಂಟರ್, ಬೈಕ್ ನಡುವೆ ಡಿಕ್ಕಿ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಜನ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸಾವನ್ನಪ್ಪಿದ್ದಾರೆ.

ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
























