ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ದ್ರವ್ಯ ತಂದು ಅದನ್ನು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳನ್ನು ಉಳ್ಳಾಲದ ಮುಸ್ತಫಾ ಸೀದಿಯಬ್ಬ, ಮೈಯದ್ದಿ, ಮೊಹಮ್ಮದ್ ಶಿಫಾನ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಬೂದು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ತಂದು, ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಫೆಬ್ರವರಿ 12ರಂದು ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕಾರನ್ನು ತಡೆದು ತಪಾಸಣೆ ನಡೆಸಿದಾಗ ದಂಧೆ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಇನ್ನೂ ಹಲವರು ಆರೋಪಿಗಳಿರುವ ಸಂತೆ ಇದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
























