ಡಿಎಚ್ಒವನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಿದ ಪತ್ರದಿಂದ ಭಾರಿ ವಿವಾದ
ಬೆಂಗಳೂರು : ಆರೋಗ್ಯ ಇಲಾಖೆ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೊಳಗಾಗಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್, ಎಐ ಯುಗದಲ್ಲಿ ವಾಟ್ಸ್ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ಕೆ.ಮೋಹನ್ ಅವರನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಿ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಬರೆದಿರುವ ಪತ್ರ ನಿನ್ನೆ ಭಾರಿ ವೈರಲ್ ಆಗಿತ್ತು. ಎಲ್ಲ ನಿಯಮಾವಳಿಗಳನ್ನು ಗಾಳಿಗೆ ತೂರಿ, ಆರೋಗ್ಯ ಇಲಾಖೆಯ ಡಿಎಚ್ಒ ಮೋಹನ್ ಅವರನ್ನು ಅಬಕಾರಿ ಉಪಆಯುಕ್ತರನ್ನಾಗಿ ನೇಮಿಸಲು ಶಿಫಾರಸ್ಸು ಮಾಡಿರುವ ಪತ್ರದ ಬಗ್ಗೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದರು.
ವೈರಲ್ ಆಗಿರುವ ಮುಖ್ಯಮಂತ್ರಿಗಳದ್ದು ಎನ್ನಲಾದ ಶಿಫಾರಸ್ಸು ಪತ್ರದಲ್ಲಿ ಪತ್ರದ ಸಂಖ್ಯೆಯಾಗಲಿ ಅಥವಾ ದಿನಾಂಕವಾಗಲಿ ನಮೂದಾಗಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರ ಸಹಿ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಹೀಗಾಗಿ ವರ್ಗಾವಣೆ ದಂಧೆಯ ಹಿಂದೆ ಕುಟುಂಬದ ವ್ಯಕ್ತಿಯೊಬ್ಬರ ಕೈವಾಡವಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಮಾಡಿದ್ದು, ಸಿಎಂ ಈ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಪಟ್ಟು ಹಿಡಿದಿತ್ತು.
ಪತ್ರದ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಸುನೀಲ್ ಕುಮಾರ್, ವರ್ಗಾವಣೆ ದಂಧೆಯಲ್ಲಿ ಎಲ್ಲ ಇಲಾಖೆಗಳು ಮುಳುಗಿವೆ. ಸರ್ಕಾರದ ಆಡಳಿತ ಹಳಿ ತಪ್ಪಿದೆ ಎಂದು ಆಕ್ರೋಶ ಹೊರಹಾಕಿದ್ದರು. ವೈದ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ಹಾಕುವುದು ಅತ್ಯಂತ ಅನುಚಿತ. ಇದು ತುಘಲಕ್ ದರ್ಬಾರ್ ಎಂದು ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದರು. ಶಾಸಕ ಅಭಯ್ ಪಾಟೀಲ್, ಸಾರಾಯಿ ಮಾರೋಕೆ ಡಾಕ್ಟರ್ ಯಾಕೆ? ಇಮಾಮ್ ಸಾಬಿಗೂ ಗೋಕುಲಾಷ್ಟಮಿಗೂ ಏನು ಸಂಬಂಧ? ಸಿಎಂಗೆ ಅರಳು ಮರಳಾಗಿದ್ದು, ಚಿಕಿತ್ಸೆಯ ಅಗತ್ಯವಿದೆ ಎಂದು ಲೇವಡಿ ಮಾಡಿದ್ದರು.
























