ಮಂಗಳೂರು: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಎದುರು ನಡೆದಿದೆ.
ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿವದಾಸ ಗಣಪತಿ ನಾಯ್ಕ್ ಎಂದು ಗುರುತಿಸಲಾಗಿದೆ. ಅವರು ಬೈಕಂಪಾಡಿಯ ಔಷಧ ತಯಾರಿಕಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರಂತ ನಡೆದಿದೆ.
ಅಪಘಾತದ ರಭಸಕ್ಕೆ ಅವರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾಗಿ ತಿಳಿದು ಬಂದಿದೆ.
























