ಮೌಲ್ಯಮಾಪನ ಪ್ರಕ್ರಿಯೆ ಬಾಕಿ ಇರುವುದರಿಂದ ವಿಳಂಬ
ಬೆಂಗಳೂರು : ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏ.7ರಂದು ಪ್ರಕಟವಾಗುವುದಿಲ್ಲ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೇ ಸುದ್ದಿಗೋಷ್ಠಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಫಲಿತಾಂಶ ನೀಡುವುದಾಗಿ ಘೋಷಿಸಿದ್ದರು. ಆದರೆ ಇಂದು ದ್ವಿತೀಯ ಪಿಯುಸಿ ರಿಸಲ್ಟ್ ಅನೌನ್ಸ್ ಆಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು ಸ್ಪಷ್ಟಪಡಿಸಿದ್ದಾರೆ. ಬಹಳ ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ನಿರಾಸೆಯಾಗಿದೆ.
ಈ ಮೊದಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಏಪ್ರಿಲ್ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿದ್ದರು. ಹೀಗಾಗಿ ಪ್ರತಿವರ್ಷಕ್ಕಿಂತ ಈ ಬಾರಿ ಬೇಗ ರಿಸಲ್ಟ್ ಕೊಡುತ್ತಾರೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದರು. ಇದೀಗ ಎಕ್ಸಾಂ ಬೋರ್ಡ್ ಅಧಿಕಾರಿಗಳು ನಾಳೆ ಫಲಿತಾಂಶ ಪ್ರಕಟವಾಗುವುದಿಲ್ಲ. ಇನ್ನೂ ಯಾವಾಗ ಫಲಿತಾಂಶ ಪ್ರಕಟಿಸಬೇಕು ಎನ್ನುವ ಕುರಿತು ದಿನಾಂಕ ನಿಗದಿಪಡಿಸಿಲ್ಲ ಎಂದು ತಿಳಿಸಿದ್ದಾರೆ.
ಮಾರ್ಚ್‌ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ರಾಜ್ಯಾದ್ಯಂತ ಸುಮಾರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಬೆನ್ನಲ್ಲೇ ಮೌಲ್ಯಮಾಪನ ಕಾರ್ಯ ಚುರುಕಿನಿಂದ ಸಾಗಿತ್ತು. ಈಗ ಕೊನೆಯ ಕ್ಷಣದಲ್ಲಿ ಮೌಲ್ಯಮಾಪನ ಪ್ರಕ್ರಿಯೆಯ ಸಣ್ಣ ಪುಟ್ಟ ಕೆಲಸಗಳು ಬಾಕಿ ಇರುವುದರಿಂದ ಫಲಿತಾಂಶದ ದಿನಾಂಕ ಮುಂದೂಡಲ್ಪಟ್ಟಿದ್ದು, ಇನ್ನೆರಡು ದಿನ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಇನ್ನು ಫಲಿತಾಂಶ ಯಾವಾಗ? ಏನು ಅಂತ ಶಿಕ್ಷಣ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲ.

























