ನಾಳೆ ಮಂಡ್ಯ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ

ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ನಾಳೆ (ಏಪ್ರಿಲ್ 15) ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಶ್ರೀಕ್ಷೇತ್ರದ ಮಾಜಿ ಪೀಠಾಧಿಪತಿ ಪರಮಪೂಜ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಇಡೀ ಆದಿಚುಂಚನಗಿರಿ ಕ್ಷೇತ್ರ ಅಲಂಕಾರಗೊಂಡು ಕಂಗೊಳಿಸುತ್ತಿದೆ. ದ್ರಾವಿಡ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಈ ಭೈರವೈಕ್ಯ ಮಂದಿರ ಹಲವು ವಿಶೇಷತೆಗಳಿಂದ ಕೂಡಿದೆ. ಕಾರ್ಯಕ್ರಮಕ್ಕಾಗಿ ಬಿಜಿಎಸ್ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಮುನ್ನೆಚ್ಚರಿಕಾ ಕ್ರಮವಾಗಿ 2000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.























































 
 

ಈ ಭೇಟಿಯ ವೇಳೆ ಪ್ರಧಾನಿ ಮೋದಿಯವರಿಗಾಗಿ ವಿಶೇಷ ‘ಮೈಸೂರು ಪೇಟ’ ಸಿದ್ಧಪಡಿಸಲಾಗಿದೆ. ಮೈಸೂರಿನ ಕಲಾವಿದ ನಂದನ್ ಸಿಂಗ್ ಐದು ದಿನಗಳ ನಿರಂತರ ಶ್ರಮದಿಂದ ಇದನ್ನು ತಯಾರಿಸಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಧರಿಸುತ್ತಿದ್ದ ಮಾದರಿಯಲ್ಲಿರುವ ಈ ಪೇಟ ಬನಾರಸ್ ಬಟ್ಟೆ ಮತ್ತು ಗಂಡಭೇರುಂಡ ವಿನ್ಯಾಸದಿಂದ ಕೂಡಿದೆ. ನಿರ್ಮಲಾನಂದನಾಥ ಶ್ರೀಗಳ ಅಣತಿಯಂತೆ ‘ನಮ್ಮೂರು ನಮ್ಮೋರು’ ಸೇವಾ ಸಂಸ್ಥೆಯ ವತಿಯಿಂದ ಈ ಗೌರವ ಅರ್ಪಿಸಲಾಗುತ್ತಿದೆ.

ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. 10.50ಕ್ಕೆ ಎಚ್‌ಎಎಲ್‌ನಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಹೆಲಿಪ್ಯಾಡ್ ತಲುಪಲಿದ್ದಾರೆ. 11 ಗಂಟೆಗೆ ರಸ್ತೆ ಮಾರ್ಗವಾಗಿ ಶ್ರೀಕ್ಷೇತ್ರದ ಮಠಕ್ಕೆ ತಲುಪಿ, ಭೈರವೈಕ್ಯ ಮಂದಿರದ ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ಮತ್ತೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಮರಳಿ, ಅಲ್ಲಿಂದ ಕೇರಳ ಪ್ರವಾಸಕ್ಕೆ ತೆರಳಲಿದ್ದಾರೆ.

error: Content is protected !!
Scroll to Top