ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಪ್ರಾರಂಭೋತ್ಸವಕ್ಕೆ ಚಾಲನೆ
ಬೆಂಗಳೂರು: ಜೂ.1ರಂದು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಏಕಕಾಲದಲ್ಲಿ ನಡೆಯುವ ‘ಮಹಾ ಪೋಷಕ-ಶಿಕ್ಷಕರ ಸಭೆ’ಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.
ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ 46,000 ಸರ್ಕಾರಿ ಶಾಲೆಗಳ ಮುಖ್ಯಶಿಕ್ಷಕರು, ಸಹಶಿಕ್ಷಕರು ಹಾಗೂ ಡಿಡಿಪಿಐ, ಡಿಡಿಪಿಯು, ಬಿಇಒ ಸೇರಿದಂತೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಿನ್ನೆ ಮಹತ್ವದ ಸಭೆ ನಡೆಸಿದರು.
ಕೆಪಿಎಸ್ ಶಾಲೆಗಳ ಉದ್ದೇಶ, ಗುಣಮಟ್ಟ ಮತ್ತು ಅಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ಪೋಷಕರಿಗೆ ಸ್ಪಷ್ಟ ಮಾಹಿತಿ ಒದಗಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ದಾಖಲಾದ ಐತಿಹಾಸಿಕ ಹಾಗೂ ಅತ್ಯುತ್ತಮ ಫಲಿತಾಂಶಕ್ಕಾಗಿ ಶಿಕ್ಷಕರು ಹಾಗೂ ಅಧಿಕಾರಿಗಳ ಹಗಲಿರುಳಿನ ಶ್ರಮವನ್ನು ಸಚಿವ ಮಧು ಬಂಗಾರಪ್ಪ ಶ್ಲಾಘಿಸಿದರು. ಇಲಾಖೆಯ 29 ಅಂಶಗಳ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದು, ಪಾರದರ್ಶಕ ಮೌಲ್ಯಮಾಪನ ಮತ್ತು ರಾಜ್ಯಮಟ್ಟದಲ್ಲಿ ಸಿದ್ಧಪಡಿಸಿದ ಪ್ರಶ್ನೆಪತ್ರಿಕೆಗಳ ಮೂಲಕ ಉಚಿತವಾಗಿ ನಡೆಸಲಾದ ಪೂರ್ವಸಿದ್ಧತಾ ಪರೀಕ್ಷೆಗಳು ಈ ಸಾಧನೆಗೆ ಕಾರಣವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
























