ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ : ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ?

ಕೊನೆಗೂ ಪಟ್ಟ ಬಿಡಲು ಸಿದ್ದರಾಮಯ್ಯ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್‌

ಬೆಂಗಳೂರು : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವಿನ ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ ತಲುಪಿದ್ದು, ಕೊನೆಗೂ ಕಾಂಗ್ರೆಸ್‌ ಹೈಕಮಾಂಡ್‌ ಅಧಿಕಾರ ಬಿಟ್ಟುಕೊಡುವಂತೆ ಸಿದ್ದರಾಮಯ್ಯನವರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಗುರುವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಸಚಿವರಿಗೆ ಬ್ರೇಕ್‌ಫಾಸ್ಟ್ ಇರಲಿದೆ. ಬ್ರೇಕ್‌ಫಾಸ್ಟ್ ಬಳಿಕ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಗುರುವಾರ ರಾಜೀನಾಮೆ ಬಳಿಕ ಸಂಜೆ ಅಥವಾ ಶುಕ್ರವಾರ ಬೆಳಗ್ಗೆ ಶಾಸಕಾಂಗ ಸಭೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಿಎಂ ಪಟ್ಟ ಒಲಿದು ಬಂದ್ರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಗುರುವಾರವೇ ಕೆಪಿಸಿಸಿ ಅಧ್ಯಕ್ಷ ಹುದ್ದೆ ಮತ್ತು ಉಪಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.





















































 
 

ಕರ್ನಾಟಕ ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ತಾರಕಕ್ಕೇರಿದ್ದ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕದನಕ್ಕೆ ಕೊನೆಗೂ ದೆಹಲಿ ದರ್ಬಾರ್‌ನಲ್ಲಿ ತೆರೆ ಬಿದ್ದಿದೆ ಎಂದು ವರದಿಗಳು ಹೇಳಿವೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸತತ 7 ಗಂಟೆಗಳ ಮ್ಯಾರಥಾನ್ ಸಭೆ ಹಾಗೂ ರಾಹುಲ್ ಗಾಂಧಿ ಅವರೊಂದಿಗಿನ ‘ಒನ್-ಟು-ಒನ್’ ರಹಸ್ಯ ಚರ್ಚೆಯ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನ ತ್ಯಾಗ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಈ ಮೊದಲು ಮಾಡಿಕೊಳ್ಳಲಾಗಿದ್ದ ಆಂತರಿಕ ‘ಅಧಿಕಾರ ಹಂಚಿಕೆ ಸೂತ್ರ’ದ ಪ್ರಕಾರ ಸಿದ್ದರಾಮಯ್ಯ ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದರೊಂದಿಗೆ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.

ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ಬುಧವಾರ ಬೆಂಗಳೂರಿಗೆ ಆಗಮಿಸಲಿದ್ದು, ಹೊಸ ಮುಖ್ಯಮಂತ್ರಿ ಜೊತೆ ಉಪಮುಖ್ಯಮಂತ್ರಿ ನೇಮಕದ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆಯು ತೀವ್ರ ಕುತೂಹಲ ಮೂಡಿಸಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘ ಸಭೆ ನಡೆಸಿದರು. ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರೊಂದಿಗೆ ನಡೆಸಿದ ಪ್ರತ್ಯೇಕ ಸಭೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಹಾಗೂ ಮುಂಬರುವ ಚುನಾವಣೆಗಳನ್ನು ಎದುರಿಸಲು ನಾಯಕತ್ವ ಬದಲಾವಣೆ ಅನಿವಾರ್ಯ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ರಾಜ್ಯಸಭಾ ಸ್ಥಾನದ ಆಫರ್ ಹಾಗೂ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹೊಸದಾಗಿ ರಚನೆಯಾಗಲಿರುವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಪಟ್ಟ ನೀಡುವ ಆಫರ್ ಅನ್ನು ಹೈಕಮಾಂಡ್ ಮುಂದಿಟ್ಟಿದೆ ಎನ್ನಲಾಗಿದೆ.

ದೆಹಲಿ ಸಭೆ ಮುಗಿದ ತಕ್ಷಣವೇ ಸಿಎಂ ಸಿದ್ದರಾಮಯ್ಯ ದೆಹಲಿಯ ಖಾಸಗಿ ಸ್ಥಳದಲ್ಲಿ ಆಪ್ತ ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್ ಹಾಗೂ ಭೈರತಿ ಸುರೇಶ್ ಅವರೊಂದಿಗೆ ತುರ್ತು ಸಭೆ ನಡೆಸಿ ಹೈಕಮಾಂಡ್ ನಿರ್ಧಾರವನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಆಪ್ತ ಸಚಿವರು, ‘ಯಾವುದೇ ಕಾರಣಕ್ಕೂ ನೀವು ರಾಜೀನಾಮೆ ಕೊಡಬೇಡಿ, ನಿಮ್ಮ ಪರವಾಗಿ ನಾವೇ ಹೈಕಮಾಂಡ್ ಜೊತೆ ಮತ್ತೊಮ್ಮೆ ಮಾತನಾಡುತ್ತೇವೆ’ ಎಂದು ಭಾವುಕರಾಗಿ ಒತ್ತಡ ಹೇರಿದ್ದಾರೆ. ಆದರೆ ಸಚಿವರ ಮನವಿಗೆ ಉತ್ತರಿಸಿದ ಸಿದ್ದರಾಮಯ್ಯ, ‘ರಾಹುಲ್ ಗಾಂಧಿ ಅವರ ಮಾತನ್ನು ನಿರಾಕರಿಸಲು ನನ್ನಿಂದ ಸಾಧ್ಯವಿಲ್ಲ. ಕೊಟ್ಟ ಮಾತಿನಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಾಗಿದ್ದೇನೆ’ ಎಂದು ಹೇಳುವ ಮೂಲಕ ಆಪ್ತರ ಒತ್ತಡಕ್ಕೆ ಬ್ರೇಕ್ ಹಾಕಿದ್ದಾರೆ.

ಮಂಗಳವಾರ ತಡರಾತ್ರಿಯೇ ಸಿದ್ದರಾಮಯ್ಯ ಸಚಿವರಾದ ಜಮೀರ್ ಅಹ್ಮದ್ ಖಾನ್, ಎಚ್.ಸಿ. ಮಹದೇವಪ್ಪ, ಕೃಷ್ಣಬೈರೇಗೌಡ ಹಾಗೂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರೊಂದಿಗೆ ಬೆಂಗಳೂರಿಗೆ ತಲುಪಿದ್ದಾರೆ. ಬುಧವಾರ ಮಹಾತ್ಮ ಗಾಂಧಿ ಹಾಗೂ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ನಂತರ ಮಹತ್ವದ ಸುದ್ದಿಗೋಷ್ಠಿ ನಡೆಸಿ ತಮ್ಮ ರಾಜೀನಾಮೆಯ ಅಧಿಕೃತ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ.

error: Content is protected !!
Scroll to Top