ಸುಬ್ರಹ್ಮಣ್ಯ ದೇವಸ್ಥಾನ ಯಾತ್ರಾರ್ಥಿಗಳಿದ್ದ ಟೆಂಪೋ ಟ್ರಾವೆಲರ್
ಸುಳ್ಯ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಮೇ 25ರಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿನತ್ತ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ಧರ್ಮಸ್ಥಳ ಕಡೆಯಿಂದ ಸುಬ್ರಹ್ಮಣ್ಯದತ್ತ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೆಂಗಳೂರು ದೇವನಹಳ್ಳಿ ಕೋಟೆ ನಿವಾಸಿ ಸಂಜು ವಿ. ಎಂಬವರು ಚಲಾಯಿಸುತ್ತಿದ್ದ ಟೆಂಪೋ ಟ್ರಾವೆಲರ್‌ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು. ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ್ನು ಶೇಟ್ ಮಲ್ಲಿಕಾ ಮದ್ರಾಸ್ ಚಲಾಯಿಸುತ್ತಿದ್ದರು. ಕೆಂಜಳದ ಅಪಾಯಕಾರಿ ತಿರುವಿನಲ್ಲಿ ಎರಡೂ ವಾಹನಗಳು ಡಿಕ್ಕಿಯಾಗಿವೆ ಎಂದು ತಿಳಿದುಬಂದಿದೆ.
ಅಪಘಾತದ ಪರಿಣಾಮವಾಗಿ ಚಿಕ್ಕಬಳ್ಳಾಪುರ ತಾಲೂಕಿನ ಕೆರೆಸಂದ್ರಮನೆ ನಿವಾಸಿ ಆಂಜನಮ್ಮ (47) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಐದು ವರ್ಷದ ನಯಾನಿಕಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನರಸಿಂಹಯ್ಯ, ವಿ.ಮಂಜುನಾಥ, ವಿ.ಗಂಗಾಧರ, ಪವಿತ್ರಾ, ಸಿರಿಪ್ರಿಯಾ ಹಾಗೂ ರತ್ನಮ್ಮ ಎಂಬವರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಲೋಕೇಶ್ ದೇವನಹಳ್ಳಿ, ಪವನ್ ಸೋಮನಹಳ್ಳಿ ಕನಕಪುರ, ಕವಿತಾ ಸಿ.ಎಂ., ಜೀವನ್, ಆಶಾ, ಪ್ರೀತಮ್ ಹಾಗೂ ಶಿವ ಎಂಬವರು ಅಪಾಯದಿಂದ ಪಾರಾಗಿದ್ದಾರೆ. ದೇವನಹಳ್ಳಿಯಿಂದ ಹೊರಟಿದ್ದ ಯಾತ್ರಾರ್ಥಿಗಳ ತಂಡ ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ವಾಪಸ್ಸಾಗುತ್ತಿರುವಾಗ ಅಪಘಾತ ಸಂಭವಿಸಿದೆ.
ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದ್ದು, ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುಂಡ್ಯ–ಸುಬ್ರಹ್ಮಣ್ಯ ರಸ್ತೆಯ ಕೆಂಜಳ ತಿರುವು ಅಪಾಯಕಾರಿ ಪ್ರದೇಶವಾಗಿ ಪರಿಣಮಿಸಿದ್ದು, ಇಲ್ಲಿ ನಿರಂತರವಾಗಿ ವಾಹನ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಅತಿವೇಗದ ಚಾಲನೆ, ತಿರುವಿನ ಅಪಾಯಕಾರಿ ವಿನ್ಯಾಸ ಹಾಗೂ ದೂರ ಪ್ರಯಾಣದಿಂದ ಚಾಲಕರಲ್ಲಿ ಉಂಟಾಗುವ ನಿದ್ರಾಮಂಪರು ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಹೇಳಲಾಗುತ್ತಿದೆ. ವಿಶೇಷವಾಗಿ ಯಾತ್ರಾರ್ಥಿಗಳ ವಾಹನಗಳು ಹೆಚ್ಚಾಗಿ ಸಂಚರಿಸುವ ಈ ರಾಜ್ಯ ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ಸ್ಥಳೀಯರು ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಿದ್ದಾರೆ.
























