ಪುತ್ತೂರು: ಲೋಕಾಯುಕ್ತ ಎಸ್ಪಿ ಡಿ. 19ರಂದು ಪುತ್ತೂರು ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಪುತ್ತೂರು ತಹಸೀಲ್ದಾರ್ ಅವರ ನ್ಯಾಯಾಲಯ ಸಂಕೀರ್ಣದಲ್ಲಿ ಉಪಸ್ಥಿತರಿದ್ದ ಲೋಕಾಯುಕ್ತ ಅಧಿಕಾರಿಗಳು, ಒಟ್ಟು 21 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿದರು. ಇವೆಲ್ಲವೂ ಕಂದಾಯ ಹಾಗೂ ಸರ್ವೇ ಇಲಾಖೆಗೆ ಸಂಬಂಧಪಟ್ಟ ಪ್ರಕರಣಗಳು. ಇವನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಯಿತು.
ಸರ್ಕಾರಿ ಅಧಿಕಾರಿಗಳಿಂದ ಆಗಬೇಕಾದ ಕೆಲಸದಲ್ಲಿ ವಿಳಂಬ, ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು, ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ ತೊಂದರೆಗೊಳಗಾದ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಪ್ರಕಟಣೆ ನೀಡಲಾಗಿತ್ತು.
ಲೋಕಾಯುಕ್ತ ಎಸ್ಪಿ ಲಕ್ಷ್ಮೀಗಣೇಶ‍್, ಡಿವೈಎಸ್ಪಿಗಳಾದ ಕಲಾವತಿ, ಚೆಲುವರಾಜ್, ನಿರೀಕ್ಷಕ ಅಮಾನುಲ್ಲ ಮೊದಲಾದ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಇತ್ಯರ್ಥಪಡಿಸಿದರು.