ಹಣ ಪಡೆದು ಬಿ ಫಾರ್ಮ್ ಹಂಚುವುದು ಲಂಚಕ್ಕೆ ಸಮ ಎಂದು ಆರೋಪ
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಹಣ ಸಂಗ್ರಹಿಸಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಹೇಳಿಕೆ ಚುನಾವಣಾ ಕಾನೂನುಗಳು ಮತ್ತು ಮಾದರಿ ನೀತಿ ಸಂಹಿತೆಯ ಗಂಭೀರ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಹಂಚಿಕೆ ಮಾಡಲು ಲಂಚ ಸ್ವೀಕರಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗದ ಅಧಿಕಾರಿಗಳನ್ನು ಆಗ್ರಹಿಸಿದರು.
ವಿಧಾನಸಭಾ ಚುನಾವಣೆ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲು ಪ್ರತಿ ಆಕಾಂಕ್ಷಿಯಿಂದ ಹಣ ಸಂಗ್ರಹಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇದು ಲಂಚಕ್ಕೆ ಸಮನಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ಶೋಭಾ ಕರಂದ್ಲಾಜೆ ವಿನಂತಿಸಿದರು.
ಹಣ ನೀಡಿದವರಲ್ಲಿ ಅಭ್ಯರ್ಥಿಯೂ ಸೇರಿದ್ದಾರೆ ಎಂಬುದು ಸ್ಪಷ್ಟವಾಗಿದ್ದು, ಲಂಚ ನೀಡಿದ ಅಭ್ಯರ್ಥಿಗಳು ಮುಂಬರುವ ಚುನಾವಣಾ ಪ್ರಕ್ರಿಯೆಯಿಂದ ಅನರ್ಹರಾಗುತ್ತಾರೆ. ಹಣ ತೆಗೆದುಕೊಂಡು ಬಿ ಫಾರ್ಮ್ ಕೊಡುವುದು ಕಾನೂನುಬಾಹಿರವಾಗಿದೆ. ಕಾಂಗ್ರೆಸ್ ಮತ್ತು ಡಿ.ಕೆ. ಶಿವಕುಮಾರ್ ನೀಡಿದ ಬಿ ಫಾರ್ಮ್‍ಗಳನ್ನು ಅಕ್ರಮ ಎಂದು ಪರಿಗಣಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಒಟ್ಟು 1,350 ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ 23 ಕೋಟಿ ರೂ. ಸಂಗ್ರಹಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಲಂಚ ಪಡೆದು ಕಾಂಗ್ರೆಸ್ ಟಿಕೆಟ್ ನೀಡಿರುವುದು ಸ್ಪಷ್ಟವಾಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವ ಜವಾಬ್ದಾರಿ ಹೊತ್ತಿರುವ ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶೋಭಾ ಕರಂದ್ಲಾಜೆ ಅವರು ಆಗ್ರಹಿಸಿದ್ದಾರೆ.